ಬ್ರಾಹ್ಮಣರಿಗೆ ಜಾತಿ, ಆದಾಯ ಪ್ರಮಾಣ ಪತ್ರ ನೀಡಲು ಆದೇಶ

ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಮತ್ತು ನಾಗರಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ.

ಬ್ರಾಹ್ಮಣರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶಿಸಿದೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು:  ಕರ್ನಾಟಕದಲ್ಲಿರುವ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲು ಸರಕಾರಿ ಆದೇಶ ಹೊರಡಿಸುವ ಮೂಲಕ ಸರಕಾರ ನುಡಿದಂತೆ ನಡೆದಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಭಾರತದ ಸಂವಿಧಾನ(ಒಂದು ನೂರ ಮೂರನೇ ತಿದ್ದುಪಡಿ) ಕಾಯ್ದೆ ಅನ್ವಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಮತ್ತು ನಾಗರಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಿ ಆದೇಶ ಹೊರಡಿಸಿತ್ತು. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುವ ಆದೇಶ ಹೊರಡಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದವರ ಕಲ್ಯಾಣ ಸರಕಾರದ ಉದ್ದೇಶವಾಗಿದೆ.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗಾಗಿ ಶಿಕ್ಷಣ, ಕೌಶಲ್ಯಾಭಿವೃದ್ಧಿ. ಸ್ವ ಉದ್ಯೋಗ ಹಾಗೂ ಇನ್ನಿತರ ಸೌಲಭ್ಯಗಳು ಯೋಜನೆಗಳನ್ನು ಜಾರಿಗೆ ತರುವ ಉದ್ದೇಶದಿಂದ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿದೆ.

ಕಂದಾಯ ಇಲಾಖೆಯಿಂದ ಈಗ ಅಧಿಕೃತ ಆದೇಶ ಹೊರಡಿಸಲಾಗಿದೆ.  ಬ್ರಾಹ್ಮಣರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶಿಸಿದೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Get real time updates directly on you device, subscribe now.