ಕಾಂಗ್ರೆಸ್ ಮುಸ್ಲಿಂ ಪುರುಷರ ಪಕ್ಷ: ರಾಹುಲ್ ಗಾಂಧಿ ಹೇಳಿಕೆಗೆ ಮೋದಿ ವ್ಯಂಗ್ಯ
ಒಂದೇ ಬಾರಿಗೆ ತ್ರಿವಳಿ ತಲಾಖ್ ನೀಡುವ ಪದ್ಧತಿ ನಿಷೇಧಿಸುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಿರುವ ಬಿಜೆಪಿ, ಅದಕ್ಕೆ ಪೂರ್ವಭಾವಿಯಾಗಿ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ಆರಂಭಿಸಿದೆ.
ಅಜಂಗಡ್: ಒಂದೇ ಬಾರಿಗೆ ತ್ರಿವಳಿ ತಲಾಖ್ ನೀಡುವ ಪದ್ಧತಿ ನಿಷೇಧಿಸುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಿರುವ ಬಿಜೆಪಿ, ಅದಕ್ಕೆ ಪೂರ್ವಭಾವಿಯಾಗಿ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ಆರಂಭಿಸಿದೆ.
ಉತ್ತರ ಪ್ರದೇಶದಲ್ಲಿ ಪೂರ್ವಾಂಚಲ ಎಕ್ಸ್ಪ್ರೆಸ್ವೇ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಸ್ಲಿಂ ಪುರುಷರ ಪಕ್ಷ ಎಂದು ವ್ಯಂಗ್ಯವಾಡಿದ್ದಾರೆ.
ಒಂದೆಡೆ ಮಹಿಳೆಯರ ಜೀವನ ಸುಧಾರಿಸುವ ಪ್ರಯತ್ನವನ್ನು ಕೇಂದ್ರ ಸರಕಾರ ಮಾಡುತ್ತಿದ್ದರೆ, ಇನ್ನೊಂದೆಡೆ ಕೆಲ ಪಕ್ಷಗಳು ಮುಸ್ಲಿಂ ಮಹಿಳೆಯರ ಜೀವನವನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ. ತ್ರಿವಳಿ ತಲಾಖ್ ಅನ್ನು ಇಸ್ಲಾಮಿಕ್ ದೇಶಗಳಲ್ಲೇ ನಿಷೇಧಿಸಲಾಗಿದೆ. ಹೀಗಾಗಿ ನಮ್ಮ ದೇಶದಲ್ಲೂ ಕೋಟಿಗಟ್ಟಲೆ ಮಹಿಳೆಯರು ಇದನ್ನು ನಿಷೇಧಿಸಬೇಕು ಎಂದು ಬೇಡಿಕೆ ಸಲ್ಲಿಸುತ್ತಿದ್ದರು ಎಂದು ಮೋದಿ ಹೇಳಿದ್ದಾರೆ.
ಕಾಂಗ್ರೆಸ್ ಮುಸ್ಲಿಮರ ಪಕ್ಷ’ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ ಎಂಬುದನ್ನು ನಾನು ಪತ್ರಿಕೆಯಲ್ಲಿ ಓದಿದ್ದೇನೆ. ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ, ನೈಸರ್ಗಿಕ ಸಂಪನ್ಮೂಲಗಳ ಮೇಲೆ ಮುಸ್ಲಿಮರು ಪ್ರಾಥಮಿಕ ಹಕ್ಕು ಹೊಂದಿರುತ್ತಾರೆ ಎಂದು ಹೇಳಿದ್ದಾಗ ನನಗೆ ಅಚ್ಚರಿಯೇನೂ ಆಗಿರಲಿಲ್ಲ. ಆದರೆ ಕಾಂಗ್ರೆಸ್ ಮುಸ್ಲಿಂ ಪುರುಷರ ಪಕ್ಷವೇ ಎಂದು ಮೋದಿ ಪ್ರಶ್ನಿಸಿದ್ದಾರೆ.